ಔಷಧಿಗಳ ಕೊರತೆಯಾಗದಂತೆ ಎಚ್ಚರವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ
ಮೈಸೂರು:
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಟಿ.ನರಸೀಪುರ ವಿಧಾನ ಸಭಾ ಕ್ಷೇತ್ರದ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಸಿದರು.
ಬಳಿಕ ಮಾತನಾಡಿದ ಅವರು ಲಾಕ್ ಡೌನ್ ವಿಸ್ತರಣೆಯಾಗಿದ್ದು, ಯಾವುದೇ ರೀತಿಯಲ್ಲೂ ಔಷಧಿಗಳು ರೋಗಿಗಳಿಗೆ ಕೊರತೆ ಉಂಟಾಗಬಾರದು. ಮೊದಲ ಡೋಸ್ ವ್ಯಾಕ್ಸಿನೇಷನ್ ಪಡೆದಿರುವವರು ನಿಗದಿತ ಅವಧಿಯಲ್ಲಿ 2ನೇ ಡೋಸ್ ಲಸಿಕೆಯನ್ನು ಪಡೆಯಬೇಕು ಎಂದರು.
ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಹರಡುತ್ತಿದ್ದು, ಈಗಿನಿಂದಲೆ ಇದರ ಬಗ್ಗೆ ಹೆಚ್ಚಿನ ಗಮನ ಕೊಡಿ. ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಮಾಡಿಸಿ. ಯಾರಿಗೆ ಆಸ್ಪತ್ರೆಯ ಅಗತ್ಯವಿದೆಯೋ ಅವರಿಗೆ ಆಸ್ಪತ್ರೆಗೆ ಸೇರಿಸಿ ಎಂದರು.
ಬೆಳಿಗ್ಗೆಯಿಂದ ಸಂಜೆಯವರೆಗೂ ಕೋವಿಡ್ ಪರೀಕ್ಷೆ ಮಾಡಿಸಿ. ಜಿಲ್ಲೆಗೆ 47KL ಆಕ್ಸಿಜನ್ ಬರುತ್ತಿದ್ದು, ವ್ಯಾಕ್ಸಿನೇಷನ್ ಹಾಗೂ ಔಷಧಿಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು.
ಮಾರ್ಕೆಟ್ ಗಳಲ್ಲಿ ಹಾಗೂ ಬ್ಯಾಂಕುಗಳಲ್ಲಿ ಜನರು ಕೋವಿಡ್ ನಿಯಮಗಳನ್ನು ಪಾಲಿಸದೆ ಗುಂಪಾಗಿ ಸೇರುತ್ತಿರುವುದರಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಕೋವಿಡ್ ನಿಯಮಗಳನ್ನು ಪಾಲಿಸದೆ ಇರುವವರಿಗೆ ದಂಡ ವಿಧಿಸಬೇಕು ಎಂದು ಹೇಳಿದರು.
ಶಾಸಕ ಅಶ್ವಿನ್ ಕುಮಾರ್ ಅವರು ಮಾತನಾಡಿ, ಕೋವಿಡ್ ಸಮಯದಲ್ಲಿ ಮನೆ ಮನೆಗೆ ತೆರಳಿ ಔಷಧಿ ಕಿಟ್ ಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಔಷಿಧಿಗಳನ್ನು ಕಳುಹಿಸಿಕೊಡುವಂತೆ ಮನವಿ ಮಾಡಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಟಿ.ನರಸೀಪುರದ ತಹಶಿಲ್ದಾರ್ ನಾಗೇಶ್, ತಾಲ್ಲೂಕು ಆರೋಗ್ಯಾಧಿಕಾರಿ ರವಿಕುಮಾರ್, ಡಾ.ವಿಜಯ್ ಕುಮಾರ್, ಡಾ.ರಶ್ಮಿ, ಡಾ.ಯೋಗೀಶ್ ದೂರ ಸೇರಿದಂತೆ ಇತರರು ಹಾಜರಿದ್ದರು.