ಹೊಸದಿಲ್ಲಿ: “ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಸಂಪುಟ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕುʼ ಎಂದರು.
ʼಸಂಪುಟ ಪುನಾರಚನೆ ರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲʼ ಎಂದರು.
ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರನ್ನೂ ಆಹ್ವಾನಿಸಿದ್ದಾರೆ :
ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಸಮಾವೇಶ ಕುರಿತಂತೆ ಹೈಕಮಾಂಡ್‌ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.