ಮೈಸೂರು:
‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸುಗಮ ಸಂಚಾರಕ್ಕೆ ಸುರಕ್ಷಿತ ಕ್ರಮ ಕೈಗೊಳ್ಳದೇ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಉದ್ಘಾಟಿಸಲಾಗಿದೆ’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಆರೋಪಿಸಿದರು.
ಮೈಸೂರಿಗೆ ಒಂದು ದಿನದ ಭೇಟಿಗೆ ಬಂದಿದ್ದ ಪರಮೇಶ್ವರ ಅವರು ತಮ್ಮ ಪತ್ನಿ ಕನ್ನಿಕಾ ಪರಮೇಶ್ವರಿ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೈಸೂರು ಅರಮನೆಗೆ ಭೇಟಿ ನೀಡಿದರು.
ಈ ವೇಳೆ ಅರಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಬಿಜೆಪಿ ತರಾತುರಿಯಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದೆ ಎಂದು ಆರೋಪಿಸಿದರು.
“ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಿದ ಎಡಿಜಿಪಿ ಅಲೋಕ್‌ಕುಮಾರ್, ಪರಿಹರಿಸಬೇಕಾದ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಟ್ರಾಫಿಕ್ ನಿಯಂತ್ರಿಸಲು ಕ್ರಮಗಳ ಕೈಗೊಳ್ಳುವಲ್ಲಿ ವಿಫಲವಾಗಿದೆ, ಸೈನ್‌ಬೋರ್ಡ್‌ಗಳ ಹಾಕದಿರುವುದು ಮತ್ತು ವಾಹನಗಳ ವೇಗವನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಎಡಿಜಿಪಿ ಅವರ ಸಂಶೋಧನೆಗಳ ಆಧಾರದ ಮೇಲೆ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತದೆ ಎಂದು ಹೇಳಿದರು.
ಶ್ರೀರಂಗಪಟ್ಟಣ ತಾಲೂಕಿನ ಗಣಗನೂರಿನಲ್ಲಿ ಶನಿವಾರ ಇ-ವೇ ಟೋಲ್ ಸಂಗ್ರಹ ಆರಂಭಗೊಂಡಿರುವ ಕುರಿತು ಪ್ರತಿಕ್ರಿಯಿಸಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಸಂಗ್ರಹ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ಎಕ್ಸ್‌ಪ್ರೆಸ್‌ವೇಯಲ್ಲಿನ ಟೋಲ್ ಸಂಗ್ರಹದ ಮೇಲೆ ನಮಗೆ ಯಾವುದೇ ನಿಯಂತ್ರಣವಿಲ್ಲ. ಆದಾಗ್ಯೂ, ವಾಹನಗಳಿಂದ ಯಾವುದೇ ಟೋಲ್ ಸಂಗ್ರಹಿಸುವ ಮೊದಲು ಯೋಜನೆಯನ್ನು ಪೂರ್ಣಗೊಳಿಸುವುದು ಮುಖ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗುತ್ತದೆ. ಪತ್ರದಲ್ಲಿ ಪ್ರಯಾಣಿಕರ ಹೊರೆ ತಗ್ಗಿಸಲು ಟೋಲ್ ಕಡಿಮೆ ಮಾಡುವಂತೆಯೂ ಮನವಿ ಮಾಡಿಕೊಳ್ಳಲಾಗುತ್ತದೆ ಎಂದರು.
ಯೋಜನೆ ಪೂರ್ಣಗೊಂಡ ನಂತರ ಮೋದಿ ಅವರು ರಸ್ತೆಯನ್ನು ಉದ್ಘಾಟಿಸಬೇಕಿತ್ತು. ಆದರೆ, ಚುನಾವಣಾ ಲಾಭ ಪಡೆಯಲು ತರಾತುರಿಯಲ್ಲಿ ಉದ್ಘಾಟನೆ ಮಾಡಲಾಗಿದೆ. ಇದೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು.