ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್ 10ರ ವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮೇ.31ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು, ಅವರನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಜೂನ್ 6ರ ವರೆಗೆ ಪ್ರಜ್ವಲ್ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶಿಸಿತ್ತು.
ಇಂದು(ಜೂ.6) ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಈ ಕುರಿತಂತೆ ಆದೇಶಿಸಿದರು.