ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಾದ-ಪ್ರತಿವಾದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ ೩೦ರಂದು ತೀರ್ಪು ಪ್ರಕಟಿಸಲಿದ್ದು, ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ತೀರ್ಪನ್ನು ಕಾಯ್ದಿರಿಸಿದ್ದಾರೆ.
ಈ ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದರು. ಪ್ರಕರಣದ ವಿಚಾರಣೆಯಲ್ಲಿ ಸರ್ಕಾರದ ಪರದಿಂದ ಪ್ರಮುಖ ಸಾರ್ವಜನಿಕ ವಕೀಲ ಬಿ.ಎನ್. ಜಗದೀಶ್ ಮತ್ತು ಅಶೋಕ್ ನಾಯ್ಕ್ ವಾದ ಮಂಡಿಸಿದರು. ಆರೋಪಿತ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಅವರು ಪ್ರತಿವಾದ ಮಂಡಿಸಿದರು.
ನ್ಯಾಯಾಲಯ ಎಲ್ಲ ವಾದಗಳನ್ನು ಆಲಿಸಿದ ನಂತರ, ತೀರ್ಪು ಘೋಷಣೆಯನ್ನು ಜುಲೈ ೩೦ಕ್ಕೆ ಮುಂದೂಡಿದೆ. ಈ ಪ್ರಕರಣ ರಾಜ್ಯದ ರಾಜಕೀಯ ವಲಯದಲ್ಲಿಯೂ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.
