ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಇದುವರೆಗೆ ನಡೆದ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸುಮಾರು 770 ಅರ್ಜಿಗಳು ಸ್ವೀಕೃತವಾಗಿದ್ದು, ಅದರಲ್ಲಿ 759 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಶನಿವಾರ ತಿಳಿಸಿದರು. ಕೇವಲ ಅರ್ಜಿ ವಿಲೇವಾರಿಯಷ್ಟೇ ಅಲ್ಲದೆ ಸಾರ್ವಜನಿಕರ ಸಮಸ್ಯೆಗಳಿಗೆ ನಿಜವಾದ ಪರಿಹಾರ ಸಿಗಬೇಕು; ಕಾನೂನು ತೊಡಕುಗಳಿರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಕೆಲಸಗಳು ಕಾಲಮಿತಿಯಲ್ಲಿ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹೊಸದುರ್ಗ ತಾಲ್ಲೂಕು ಆಡಳಿತದ ವತಿಯಿಂದ ಹೊಸದುರ್ಗ ಪಟ್ಟಣದ ಅಶೋಕ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಶಾಸಕರು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಪ್ರಜಾಸೇವಾ ಆಂದೋಲನ ನಡೆದಿದೆ. ಜಿಲ್ಲಾ ಮಟ್ಟದ ಸಭೆಗಳಲ್ಲಿ ಹಿರಿಯೂರಿನಲ್ಲಿ 287 ಅರ್ಜಿಗಳು ಬಂದಿದ್ದು, 282 ವಿಲೇವಾರಿಯಾಗಿವೆ; ಹೊಳಲ್ಕೆರೆಯಲ್ಲಿ 66 ಅರ್ಜಿಗಳ ಪೈಕಿ 64 ವಿಲೇವಾರಿಯಾಗಿವೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ಅರ್ಜಿಗಳ ವಿಲೇವಾರಿ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು ಎಂದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿತು. ಅಧಿಕಾರ ಹಸ್ತಾಂತರದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಪ್ರಜಾಸೇವಾ ಆಂದೋಲನ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಇದನ್ನು ಸ್ವತಃ ಮುಖ್ಯಮಂತ್ರಿಗಳೇ ನಿರ್ವಹಿಸುತ್ತಿದ್ದಾರೆ. ಹಿಂದೆ ಜನಸ್ಪಂದನ ಸಭೆಗಳು ಸಾಂಪ್ರದಾಯಿಕವಾಗಿ ನಡೆಯುತ್ತಿದ್ದವು; ಈಗ ಈ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಿರ್ವಹಣೆ ನಡೆಯಲಿದೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದರು.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಜೊತೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಿ ಪ್ರತಿ ಸಂಘಕ್ಕೆ ರೂ.10 ಲಕ್ಷ ನೀಡುವ ವ್ಯವಸ್ಥೆ ಮಾಡಲಾಗಿದೆ. ರೈತರಿಗಾಗಿ ‘ನೇಗಿಲಯೋಗಿ’, ‘ತೇಗದ ಸಿರಿ’ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಬಿತ್ತನೆ ಮಾಡದವರಿಗೂ ವಿಮೆ ದೊರೆಯಲಿದೆ. ಇದಕ್ಕಾಗಿ ಪ್ರತ್ಯೇಕವಾಗಿ ಸುಮಾರು 207 ಕೋಟಿ ರೂ. ಬಿಡುಗಡೆಯಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಭದ್ರಾ ಜಲಾಶಯದಿಂದ ನೀರು ಹರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವರ್ಷ 29.9 ಟಿಎಂಸಿ ನೀರು ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ಮೋಟಾರ್ ಅಥವಾ ಕಾಲುವೆ ಮೂಲಕ ನೀರು ಪಡೆಯುವ ಮೂಲಕ ಯೋಜನೆಗೆ ಯಾವುದೇ ಹಾನಿ ಉಂಟುಮಾಡಬಾರದು ಎಂದು ಎಚ್ಚರಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಸಾರ್ವಜನಿಕರು ಖಾತೆ ಬದಲಾವಣೆ, ನಿವೇಶನ, ಹಕ್ಕುಪತ್ರ, ಪಿಂಚಣಿ ಅಥವಾ ಇತರೆ ಆಡಳಿತಾತ್ಮಕ ಕೆಲಸಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಅರ್ಜಿಗಳನ್ನು ಸ್ವೀಕರಿಸಿ ಶೀಘ್ರ ಪರಿಹಾರ ಒದಗಿಸಲಿದ್ದಾರೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಆರೋಗ್ಯ, ಅರಣ್ಯ, ಪಶುಸಂಗೋಪನೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು. ಹೊಸದುರ್ಗ ಹಾಗೂ ಇತರ ಪಟ್ಟಣ ಪ್ರದೇಶಗಳಲ್ಲಿ ಈಗಾಗಲೇ ಮನೆ ಕಟ್ಟಿಕೊಂಡಿರುವವರಿಗೆ ಜಾಗದ ಹಕ್ಕುಪತ್ರ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಮಂಜೂರಾದ ಅಂತರ್ಜಾತಿ ವಿವಾಹಿತ ಜೋಡಿಗಳಿಗೆ ಎಫ್ಡಿ ಬಾಂಡ್ ವಿತರಿಸಲಾಯಿತು.
ಜಿಲ್ಲಾಧಿಕಾರಿ ಎಸ್. ರಮ್ಯಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ಎಸ್. ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಕೆ.ಆರ್. ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಯತೀಂದ್ರ; ಇ-ಖಾತಾ ವಿತರಣೆ
