Home ರಾಜಕೀಯ Ramanagara district renamed as Bangalore South| ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ:...

Ramanagara district renamed as Bangalore South| ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ: ಡಿಸಿಎಂ ಡಿ.ಕೆ. ಶಿವಕುಮಾರ್

38
0
Ramanagara Renamed to Bangalore South District: DCM D.K. Shivakumar

ಬೆಂಗಳೂರು, ಮೇ 22: “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು ಬೆಂಗಳೂರು ಜಿಲ್ಲೆಯಾಗಿತ್ತು. ಆಡಳಿತಾತ್ಮಕ ದೃಷ್ಟಿಯಿಂದ ಈ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಈ ಮರುನಾಮಕರಣ ಮಾಡುತ್ತಿರುವ ವಿಚಾರವನ್ನು ತಿಳಿಸಲು ಸಂತೋಷವಾಗುತ್ತಿದೆ” ಎಂದು ತಿಳಿಸಿದರು.

ರಾಮನಗರ ಜಿಲ್ಲೆ ಮರುನಾಮಕರಣದ ಹೆಚ್ಚಿನ ಅನುಕೂಲಗಳೇನು, ಇದಕ್ಕೆ ತಗುಲುವ ವೆಚ್ಚ ಎಷ್ಟು ಎಂದು ಕೇಳಿದಾಗ, “ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ಇದಕ್ಕಾಗಿ ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ನಮ್ಮದು ಮೊದಲು ಬೆಂಗಳೂರು ಜಿಲ್ಲೆಯಾಗಿತ್ತು. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷನಾಗಿದ್ದೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ರಾಮನಗರ, ಕನಕಪುರ, ಮಾಗಡಿ ಇವೆಲ್ಲವೂ ಬೆಂಗಳೂರಿನ ಭಾಗವಾಗಿತ್ತು. ಆ ಹೆಸರನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಈ ಜಿಲ್ಲೆಯನ್ನು ಕಾನೂನು ಚೌಕಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ತಿಳಿಸಿದರು.

ಇದಕ್ಕೆ ಕೇಂದ್ರ ಸರ್ಕಾರ ವಿರೋಧಿಸಿತ್ತು ಎಂದು ಕೇಳಿದಾಗ, “ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ. ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದೆವು. ಆದರೆ ಕೆಲವರು ರಾಜಕೀಯ ಮಾಡುವ ಪ್ರಯತ್ನ ಮಾಡಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದು ನಮ್ಮ ಹಕ್ಕು. ಗದಗ, ಚಾಮರಾಜನಗರ ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳನ್ನು ಮಾಡಿದ್ದೇವೆ. ರಾಮನಗರ ಜಿಲ್ಲೆ ಎಂದು ಮಾಡಿದಾಗ ಕೇಂದ್ರವನ್ನು ಕೇಳಿರಲಿಲ್ಲ. ಇನ್ನುಮುಂದೆ ಎಲ್ಲಾ ದಾಖಲೆಗಳಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆಯಾಗಲಿದೆ. ನನ್ನನ್ನು ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯವನು ಎಂದು ಕರೆಯಬೇಕು” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here