Home ಕರ್ನಾಟಕ ನಾನು ಮುಖ್ಯಮಂತ್ರಿ ಆಗಿರೋದು ಜನರ ಆಶೀರ್ವಾದದಿಂದ ಅನ್ನೋದು ನೆನಪಿರಲಿ: BJP-JDS ಗೆ ಎಚ್ಚರಿಕೆ ನೀಡಿದ ಸಿಎಂ

ನಾನು ಮುಖ್ಯಮಂತ್ರಿ ಆಗಿರೋದು ಜನರ ಆಶೀರ್ವಾದದಿಂದ ಅನ್ನೋದು ನೆನಪಿರಲಿ: BJP-JDS ಗೆ ಎಚ್ಚರಿಕೆ ನೀಡಿದ ಸಿಎಂ

12
0
Remember that I am Chief Minister with the blessings of the people: CM warns BJP-JDS

ದೇವರಗುಡ್ಡ (ಹಾವೇರಿ): ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು.

ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು.

“ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ” ಎಂದು ಜನಸ್ತೋಮ ಪ್ರತಿಕ್ರಿಯಿಸಿತು.

ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಸಿಎಂ‌ ಮನವಿ ಮಾಡಿದರು.

ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದರು.

ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ‌ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು BJP-JDS ಗೆ ಎಚ್ಚರಿಕೆ ನೀಡಿದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ BJP-JDS ನವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಎಚ್ಚರಿಸಿದರು.

ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸಬೇಕು, ಸೋಲಿಸಬೇಕು ಎಂದರು.

ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಕಾರ್ಣಿಕದ ನಾಗಪ್ಪಜ್ಜ ಉರ್ಮಿ, ದೇವರಗುಡ್ದದ ಕರಿಯಪ್ಪಜ್ಜ ಹಕಾರಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶಿವಣ್ಣ ವಹಿಸಿದ್ದರು.

ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಉಪಸಭಾಪತಿಗಳಾದ ರುದ್ರಪ್ಪ ಮಾ.ಲಮಾಣಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ , ಮಾಜಿ ಸಚಿವ ಶಂಕರ್, ನೆಹರೂ ಓಲೆಕಾರ್, ಗುಡ್ಡದಾಪುರ ಗ್ರಾ.ಪಂ.ಅಧ್ಯಕ್ಷರಾದ ದ್ಯಾಮವ್ವ ಮೈ ಸತಗಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here