ಬೆಂಗಳೂರು, ಮೇ 2: ಇತ್ತೀಚಿನ ಮಳೆ ಅವಾಂತರಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಕಾಂಪೌಂಡ್ ಗೋಡೆಗಳು ಹಾಗೂ ಶಿಥಿಲಾವಸ್ಥೆಯ ಕಟ್ಟಡಗಳನ್ನು ತಕ್ಷಣ ಗುರುತಿಸಿ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಏಪ್ರಿಲ್ 29ರಂದು ಸುರಿದ ಆಲಿಕಲ್ಲು ಸಹಿತ ಭಾರೀ ಮಳೆ ಮತ್ತು ಬಿರುಗಾಳಿಯಿಂದ ನಗರದಲ್ಲಿ ಅನೇಕ ಮರಗಳು, ಕೊಂಬೆಗಳು ಉರುಳಿ ರಸ್ತೆಗಳಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಗಂಭೀರ ಗಮನ ಹರಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಿಂದ 7 ಮಂದಿ ಮೃತಪಟ್ಟ ದುರಂತದ ನಂತರ, ನಗರದಲ್ಲಿ ಇನ್ನೂ ಹಲವೆಡೆ ಅಪಾಯಕಾರಿ ಸ್ಥಿತಿಯಲ್ಲಿರುವ ಗೋಡೆಗಳು, ಕಟ್ಟಡಗಳು ಹಾಗೂ ಮರಗಳು ಸಾರ್ವಜನಿಕರಿಗೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮುಂಜಾಗ್ರತಾ ಕ್ರಮಗಳಿಗೆ ವಿಶೇಷ ತಂಡಗಳು
ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ನಗರಪಾಲಿಕೆ ಸಿಬ್ಬಂದಿಯನ್ನು ಒಳಗೊಂಡಂತೆ ವಿಶೇಷ ತಂಡಗಳನ್ನು ರಚಿಸಿ, ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಎಲ್ಲಾ ಐದು ನಗರಪಾಲಿಕೆಗಳಿಗೆ ಸೂಚಿಸಲಾಗಿದೆ. ಮುಂಗಾರು ಮಳೆಯ ಸಾಧ್ಯತೆಯನ್ನು ಮನಗಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸಲಾಗುತ್ತಿದೆ.
ಶಿಥಿಲಾವಸ್ಥೆಯ ಗೋಡೆಗಳ ತೆರವು ಕಾರ್ಯಾಚರಣೆ
ಕೇಂದ್ರ ನಗರಪಾಲಿಕೆ ವ್ಯಾಪ್ತಿಯ ಬಿನ್ನಿಮಿಲ್ ರಸ್ತೆಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಭಾಗಶಃ ಕುಸಿದ ಹಿನ್ನೆಲೆಯಲ್ಲಿ, 25 ಅಡಿ ಎತ್ತರದ 300 ಮೀಟರ್ ಗೋಡೆಯನ್ನು ನೆಲಸಮಗೊಳಿಸಲಾಗಿದೆ. ಇದಲ್ಲದೆ, 10 ಅಡಿ ಎತ್ತರದ 100 ಮೀಟರ್ ಗೋಡೆಯ ತೆರವು ಕಾರ್ಯ ಪ್ರಗತಿಯಲ್ಲಿದೆ.
ಪಶ್ಚಿಮ ನಗರಪಾಲಿಕೆ ವ್ಯಾಪ್ತಿಯ ಮಲ್ಲೇಶ್ವರದಲ್ಲಿರುವ ಮೈಸೂರು ಲ್ಯಾಂಪ್ಸ್ ಆವರಣದ 240 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಯಶಸ್ವಿಯಾಗಿ ತೆರವುಗೊಳಿಸಲಾಗಿದೆ.
ನಗರದಲ್ಲಿ ಇಂತಹ ಅಪಾಯಕಾರಿ ಮೂಲಸೌಕರ್ಯಗಳನ್ನು ಗುರುತಿಸಿ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ಮುಂಗಾರು ಅವಧಿಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
