Home ಕರ್ನಾಟಕ ಹಿರಿಯ ನಾಯಕ, ಹಾನಗಲ್‌ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ

ಹಿರಿಯ ನಾಯಕ, ಹಾನಗಲ್‌ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ

71
0

ಬೆಂಗಳೂರು:

ಹಾನಗಲ್‌ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ ಮಂಗಳವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ರಾಜ್ಯದ ಗಣ್ಯರು ಕಂಬನಿ ಮಿಡಿದಿದ್ದಾರೆ.

ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 85 ವರ್ಷದ ಉದಾಸಿ, ಮೇ 25ರಂದು ನಗರದ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು.

1983ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಉದಾಸಿ, 1985ರಲ್ಲಿ ಬಿಜೆಪಿ, 1994ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು. ನಂತರ ಮತ್ತೊಮ್ಮೆ ಬಿಜೆಪಿ ಸೇರಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನಿಕಟವರ್ತಿಯಾಗಿದ್ದರು. 2004, 2008, 2018ರಲ್ಲಿ ಬಿಜೆಪಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು.

 ಮುಖ್ಯಮಂತ್ರಿಗಳ ಸಂತಾಪ

ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ  ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here