ಬೆಂಗಳೂರು:
ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ.
ತತ್ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿರುವ ಅವರು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರುಗಳು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗಿದ್ದು ಅವರು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಅಲ್ಲದೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವ್ಹಂಬರ್ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಇದರಿಂದ ಜನೆವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು, ಅದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ ಅನುಕೂಲವಾಗುವುದು. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳನ್ನು ಕೋರಿದ್ದಾರೆ.