ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಅವರನ್ನು ಅಮಾನತುಗೊಳಿಸುವಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
36 ವರ್ಷದ ಮಹಿಳೆಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಡಿ.ಜಿ. ಕಚೇರಿಗೆ ದೂರು ಸಲ್ಲಿಸಿದ್ದರು. ಮಹಿಳೆಯ ದೂರಿನ ಆಧಾರದ ಮೇಲೆ ಸುನೀಲ್ ಮತ್ತು ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, “ಡಿ.ಜೆ.ಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಎಸ್ಸೈ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಅಮಾನತು ಮಾಡಲಾಗಿದೆ. ವಿಚಾರಣೆ ಪ್ರಕ್ರಿಯೆ ನಡೆಯುತ್ತಿದೆ,” ಎಂದು ತಿಳಿಸಿದ್ದಾರೆ.
ಆಂತರಿಕ ಹಾಗೂ ಕ್ರಿಮಿನಲ್ ತನಿಖೆ ಸದ್ಯ ಮುಂದುವರಿದಿದ್ದು, ಆರೋಪಗಳ ಸತ್ಯಾಸತ್ಯತೆ ಹಾಗೂ ಅಧಿಕಾರ ದುರುಪಯೋಗದ ವಿಚಾರದಲ್ಲಿ ತನಿಖಾಧಿಕಾರಿಗಳು ವರದಿ ಸಲ್ಲಿಸಲಿದ್ದಾರೆ.
ಈ ಘಟನೆ ಪೊಲೀಸ್ ಇಲಾಖೆಯೊಳಗೆ ಶಿಸ್ತಿನ ಕೊರತೆ, ಅಧಿಕಾರ ದುರುಪಯೋಗ ಮತ್ತು ಮಹಿಳಾ ಭದ್ರತೆ ಕುರಿತಾಗಿ ಹೊಸ ಚರ್ಚೆಗೆ ಕಾರಣವಾಗಿದೆ.
