ಬಜರಂಗದಳದ ಮುಖಂಡನ ಮೇಲೆ ಹಲ್ಲೆ
ಶಿವಮೊಗ್ಗ:
ಇಲ್ಲಿನ ಬಜರಂಗದಳದ ಮುಖಂಡರೊಬ್ಬರ ಮೇಲೆ ಹಲ್ಲೆ ನಡೆದ ಘಟನೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ನಗರದಲ್ಲಿ 144 ನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಜರಂಗದಳದ ಸಹ ಸಂಚಾಲಕ ನಾಗೇಶ್ ಎಂಬವರ ಮೇಲೆ ಇಂದು ಹಲ್ಲೆ ನಡೆದಿತ್ತು. ಪರಿಣಾಮ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಹಲ್ಲೆಯಿಂದ ನಾಗೇಶ್ ಗಾಯಗೊಂಡು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಘರ್ಷಣೆ ಕೂಡ ಉಂಟಾಗಿತ್ತು. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.