ಬೆಂಗಳೂರು, ಮಾ.04: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ವಿಚಾರ ಕೇಳಿದಾಗ, “ನಾನು ಖರ್ಗೆ ಅವರನ್ನು ಭೇಟಿ ಮಾಡದೇ ಬಿಜೆಪಿ ಕಚೇರಿಗೆ ಭೇಟಿ ನೀಡಲೇ?. ಅವರು ರಾಷ್ಟ್ರದ ಅಧ್ಯಕ್ಷರು, ನಾನು ರಾಜ್ಯದ ಅಧ್ಯಕ್ಷ. ಅವರು ನಮ್ಮ ರಾಜ್ಯಕ್ಕೆ ಬಂದಾಗ ಹೋಗಿ ಭೇಟಿ ಮಾಡಿ ಗೌರವ ನೀಡುವುದು ನಮ್ಮ ಕೆಲಸ. ಪಕ್ಷದ ವಿಚಾರಗಳು, ನೂತನ ಕಾಂಗ್ರೆಸ್ ಕಚೇರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು, ಈ ತಿಂಗಳಿನಲ್ಲಿಯೇ ದಿನಾಂಕ ನೀಡಿ ಎಂದು ಮನವಿ ಮಾಡಲು ಹೋಗಿದ್ದೆ” ಎಂದರು.
ಸಂದರ್ಭ ಬೇರೆ ರೀತಿಯಿದ್ದು, ಯಾವುದೇ ಭೇಟಿಗೂ ನಾನಾ ಅರ್ಥಗಳು ಉಂಟಾಗುತ್ತವೆ ಎಂದು ಕೇಳಿದಾಗ, “ಯಾವ ರೀತಿ ಬೇಕಾದರೂ ಅರ್ಥ ಮಾಡಿಕೊಳ್ಳಲಿ, ಸಾವಿರ ಚರ್ಚೆ ಮಾಡಲಿ” ಎಂದು ಹೇಳಿದರು.