ರಾಜೀನಾಮೆ ಬಳಿಕ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಸಿದ್ದರಾಮಯ್ಯ; ಮುಂದಿನ ರಾಜಕೀಯ ಪಾತ್ರದ ಕುರಿತು ಚರ್ಚೆ
ನವದೆಹಲಿ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಿಗ್ಗೆ ನವದೆಹಲಿಯ 10, ಜನಪಥ್ನಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಈ ವೇಳೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಕೂಡ ಉಪಸ್ಥಿತರಿದ್ದರು.
ರಾಜ್ಯಸಭೆಗೆ ತೆರಳುವ ಅವಕಾಶವನ್ನು ಈಗಾಗಲೇ ತಿರಸ್ಕರಿಸಿರುವ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ತಮ್ಮ ಪಾತ್ರ ಹಾಗೂ ರಾಜಕೀಯ ಭವಿಷ್ಯದ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ.
ಕರ್ನಾಟಕದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ, ನೂತನ ಸರ್ಕಾರ ರಚನೆ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ವೇಗ ಪಡೆದಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಹಾಗೂ ನೂತನ ಸಚಿವ ಸಂಪುಟದ ರಚನೆ ಕುರಿತು ದೆಹಲಿಯಲ್ಲಿ ಮಹತ್ವದ ಸಮಾಲೋಚನೆಗಳು ನಡೆಯುತ್ತಿವೆ.
ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಈ ಸರಣಿ ಸಭೆಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ಹೊಸ ನಾಯಕತ್ವದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.
