ಬೆಳಗಾವಿ, ಡಿ.10: ರಾಜ್ಯದಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿ ಮಾಡಲಾಗಿದ್ದು, ಸಂಬಂಧಿಸಿದ ನಿಯಮಾವಳಿಗಳನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ತಿಗೆ ತಿಳಿಸಿದರು.
ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವಲ್ಲಿ ಅನುಭವವಾಗುತ್ತಿದ್ದ ವಿಳಂಬವನ್ನು ನಿವಾರಿಸಲು ಹಲವು ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ–ಸಲಹೆಗಳನ್ನು ಪಡೆದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಂಬಂಧ ಕರಡು ನಿಯಮಗಳ ಅಧಿಸೂಚನೆ 17.09.2025ರಂದು ಹೊರಡಿಸಲಾಗಿದ್ದು, ಶೀಘ್ರದಲ್ಲೇ ಅಂತಿಮ ಅಧಿಸೂಚನೆ ಜಾರಿಯಾಗಲಿದೆ ಎಂದರು.
ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ
• 2 ಎಕರೆವರೆಗೆ ಪರಿವರ್ತನೆ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವಲ್,
• ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಸಂಪೂರ್ಣ ಪರಿವರ್ತನೆ ವಿನಾಯಿತಿ,
ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಇದೇ ವೇಳೆ ಕಂದಾಯ ನ್ಯಾಯಾಲಯಗಳು ನಡೆಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.
