ಪೂರ್ವ ಬೆಂಗಳೂರಿನಲ್ಲಿ ಅಕ್ರಮ ತ್ಯಾಜ್ಯ ವಿಲೇವಾರಿಗೆ ಬ್ರೇಕ್; 6 ವಾಹನ ವಶ, ಎಫ್ಐಆರ್ ದಾಖಲು
ಬೆಂಗಳೂರು, ಮೇ 31: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಹದೇವಪುರ ವಲಯದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಘನತ್ಯಾಜ್ಯ ಸಾಗಿಸಿ ಖಾಲಿ ಜಾಗಗಳಲ್ಲಿ ಸುರಿಯುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ನಗರ ಪಾಲಿಕೆ ಅಧಿಕಾರಿಗಳು 6 ವಾಹನಗಳನ್ನು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್, ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ನಿರಂತರ ನಿಗಾವಹಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಅಕ್ರಮ ತ್ಯಾಜ್ಯ ವಿಲೇವಾರಿಯಲ್ಲಿ ತೊಡಗಿದ್ದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.
ನಗರ ಪಾಲಿಕೆಯ ವಿವಿಧ ಪ್ರದೇಶಗಳ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಿಂದ ಬಲ್ಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲು ಇಕೋ ಸ್ಪಿಯರ್ ವೆಸ್ಟ್ ಸೆಲ್ಯೂಷನ್ ಸಂಸ್ಥೆಗೆ ಅಧಿಕೃತ ಕಾರ್ಯಾದೇಶ ನೀಡಲಾಗಿತ್ತು. ಆದರೆ ನೌಶಾದ್ ಮತ್ತು ಇತರರ ತಂಡ ಕಂಪನಿಯ ಹೆಸರಿನಲ್ಲಿ ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ವಿವಿಧ ಪ್ರದೇಶಗಳಿಂದ ಅನಧಿಕೃತವಾಗಿ ಬಲ್ಕ್ ತ್ಯಾಜ್ಯ ಸಂಗ್ರಹಿಸಿ, ಕಾಡುಗೋಡಿ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ಸಮೀಪ ದಕ್ಷಿಣ ಪಿನಾಕಿನಿ ನದಿಯ ಪಕ್ಕದಲ್ಲಿರುವ ಪ್ರದೇಶಗಳಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ನಗರ ಪಾಲಿಕೆ ಅಧಿಕಾರಿಗಳು ನಿರಂತರ ನಿಗಾವಹಿಸಿ ಮೇ 29ರಂದು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆ ವೇಳೆ ಅಕ್ರಮವಾಗಿ ತ್ಯಾಜ್ಯ ಸುರಿಯಲು ಬಂದಿದ್ದ ತ್ಯಾಜ್ಯ ತುಂಬಿದ ಐದು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಾಹನ ಚಾಲಕರು ಸ್ಥಳದಿಂದ ಪರಾರಿಯಾಗಿದ್ದರು. ಮೇ 30ರಂದು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಇನ್ನೊಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಆರು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ವಶಪಡಿಸಿಕೊಂಡ ವಾಹನಗಳ ನೋಂದಣಿ ಸಂಖ್ಯೆಗಳು: KA-07-A-398, KA-52-B-8275, KA-53-A-4649, AP-39-VB-6604, KA-18-C-6915 ಹಾಗೂ KA-40-A-4837.
ನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು ನೀಡಿದ ದೂರಿನ ಆಧಾರದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಾಹನಗಳ ಮಾಲೀಕರು, ಚಾಲಕರು, ತ್ಯಾಜ್ಯ ವಿಲೇವಾರಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಹಾಗೂ ತ್ಯಾಜ್ಯ ಸುರಿಯಲು ಅವಕಾಶ ನೀಡಿದ ಭೂ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪ್ರಕರಣ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಡಿ.ಎಸ್. ರಮೇಶ್, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಚಟುವಟಿಕೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ನಗರದ ಸ್ವಚ್ಛತೆಗೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.
ನಗರವನ್ನು ಸ್ವಚ್ಛ ಹಾಗೂ ಆರೋಗ್ಯಯುತವಾಗಿಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಅಕ್ರಮವಾಗಿ ತ್ಯಾಜ್ಯ ಸುರಿಯುವ ವಾಹನಗಳು ಅಥವಾ ವ್ಯಕ್ತಿಗಳ ಬಗ್ಗೆ ಮಾಹಿತಿ ದೊರೆತರೆ ತಕ್ಷಣ ನಗರ ಪಾಲಿಕೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.
ಕಾರ್ಯಾಚರಣೆಯಲ್ಲಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಮಾರ್ಷಲ್ ಸೂಪರ್ವೈಸರ್ಗಳು, ವಾರ್ಡ್ ಮಾರ್ಷಲ್ಗಳು, ಆರೋಗ್ಯ ಪರಿವೀಕ್ಷಕರು ಹಾಗೂ ಇತರೆ ಸಿಬ್ಬಂದಿ ಭಾಗವಹಿಸಿದ್ದರು.
