ಬೆಂಗಳೂರು: ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕಾಫಿ ಹಾಗೂ ಟೀ ಎಸ್ಟೇಟ್ಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ಗೃಹ ಸಚಿವರ ಪರವಾಗಿ ರಾಮಲಿಂಗಾರೆಡ್ಡಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗಮನ ಸೆಳೆವ ಸೂಚನೆಯಡಿ, ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಮಾಹಿತಿ ನೀಡುವವರಿಗೆ ಪೊಲೀಸರ ಕಿರುಕುಳ ಎದುರಾಗುತ್ತಿದೆ ಎಂದು ಆರೋಪಿಸಿದರು. ಸಚಿವರು, ರಾಜ್ಯದಲ್ಲಿ 370 ಮಂದಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿದ್ದು, ಅವರಲ್ಲಿ 213 ಮಂದಿಯನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಯಾಗಿ ಯತ್ನಾಳ್ ಅವರು, ಕಾಫಿ ಮತ್ತು ಟೀ ಎಸ್ಟೇಟ್ಗಳಲ್ಲಿ ಇನ್ನೂ ಹೆಚ್ಚಿನ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂದು ಹೇಳಿದರು. ಸಚಿವ ರಾಮಲಿಂಗಾರೆಡ್ಡಿ ಅವರು, ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯಕ್ಕೆ ನುಸುಳುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯವಲ್ಲ; ಅವರು ದೇಶದ ಗಡಿಯನ್ನು ದಾಟಿ ಹಲವು ರಾಜ್ಯಗಳ ಮೂಲಕ ಕರ್ನಾಟಕಕ್ಕೆ ಬರುತ್ತಿದ್ದಾರೆ. ಆದ್ದರಿಂದ ಇದು ಕೇಂದ್ರ ಸರ್ಕಾರದ ವೈಫಲ್ಯ ಎಂದು ಅಭಿಪ್ರಾಯಪಟ್ಟರು.
ಆದರೂ, ರಾಜ್ಯದಲ್ಲಿ ವಾಸವಾಗಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು SIT ಮೂಲಕ ಪತ್ತೆಹಚ್ಚಿ ಕಾನೂನು ಪ್ರಕ್ರಿಯೆಯಂತೆ ಗಡಿಪಾರು ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಕ್ರಮ ವಲಸೆಗೆ ಸಹಾಯ ಮಾಡುತ್ತಿರುವ ಏಜೆಂಟ್ಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಕ್ರಮ ವಲಸಿಗರ ಕುರಿತು ಮಾಹಿತಿ ನೀಡುವವರ ಹೆಸರನ್ನು ಸಂಪೂರ್ಣವಾಗಿ ಗೌಪ್ಯವಾಗಿರಿಸಲಾಗುವುದು ಎಂದು ಸ್ಪಷ್ಟಪಡಿಸಿದ ಸಚಿವರು, ಈ ವಿಚಾರದಲ್ಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
