ಬೆಳಗಾವಿ: ಡಾ. ಕಸ್ತೂರಿ ರಂಗನ್ ಸಮಿತಿಯ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ (ESZ) ಸಂಬಂಧಿತ ಕರಡು ಅಧಿಸೂಚನೆಯನ್ನು ತಿರಸ್ಕರಿಸುವುದಾಗಿ ಕರ್ನಾಟಕ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ಪ್ರಕಟಿಸಿದೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಐವನ್ ಡಿ’ಸೋಜಾ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 865ಕ್ಕೆ ಉತ್ತರಿಸಿದ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಸ್ತೂರಿ ರಂಗನ್ ಸಮಿತಿ ಶಿಫಾರಸ್ಸುಗಳನ್ನು ಅನುಸರಿಸಿ ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಈಗಾಗಲೇ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
ಈ ಸಂಬಂಧ ದಿನಾಂಕ 30-09-2024ರಂದು ರಾಜ್ಯ ಸರ್ಕಾರ ತನ್ನ ಅಧಿಕೃತ ನಿಲುವನ್ನು ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯಕ್ಕೆ ಲಿಖಿತವಾಗಿ ಸಲ್ಲಿಸಿದೆ ಎಂದು ಸಚಿವರು ವಿವರಿಸಿದರು.
ಕಸ್ತೂರಿ ರಂಗನ್ ವರದಿ ಈವರೆಗೂ ಜಾರಿಯಾಗದೇ ಇರುವುದರಿಂದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂಬ ಆರೋಪಗಳು ಸತ್ಯವಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು. ವರದಿ ಜಾರಿಯಾಗದಿರುವ ಹಿನ್ನೆಲೆಯಲ್ಲಿ ಜನರು ತಮ್ಮ ನೆಲೆಯಲ್ಲೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅಸಾಧ್ಯವಾಗಿದೆ ಎಂಬ ಆತಂಕವೂ ಇಲ್ಲ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರದ ಈ ನಿಲುವು, ಸ್ಥಳೀಯ ಜನಜೀವನ, ಕೃಷಿ, ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ರಕ್ಷಿಸುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಪರೋಕ್ಷವಾಗಿ ಸೂಚಿಸಿದರು.
