ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ, ಎಚ್.ಡಿ.ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು/ನವದೆಹಲಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಲಭಿಸಿದ್ದು, ತುರ್ತು ವಿಚಾರಣೆಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಲ್ಲಿಸಿದ್ದ ತುರ್ತು ವಿಚಾರಣೆಯ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸರ್ವೇ ಕಾರ್ಯಗಳ ಬಳಿಕ ತುರ್ತು ವಿಚಾರಣೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕುಮಾರಸ್ವಾಮಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ವಾದಿಸಿದರು.
ಈ ವಾದವನ್ನು ಮಾನ್ಯಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ತುರ್ತು ವಿಚಾರಣೆ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದರಿಂದ ಪರೋಕ್ಷವಾಗಿ ಕುಮಾರಸ್ವಾಮಿ ಅವರ ವಾದಕ್ಕೆ ನ್ಯಾಯಾಲಯ ಮನ್ನಣೆ ನೀಡಿದಂತಾಗಿದ್ದು, ಅವರಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಪ್ರಕರಣ ಮುಂದಿನ ದಿನಗಳಲ್ಲಿ ಸಾಮಾನ್ಯ ವಿಚಾರಣೆಯಡಿ ಮುಂದುವರಿಯಲಿದೆ.
