ಬೆಂಗಳೂರು, ಮಾರ್ಚ್ 12: ಬೆಂಗಳೂರು ನಗರ ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲ (Domestic LPG) ಸಿಲಿಂಡರ್ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಎಲ್ಪಿಜಿ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದ್ದು, ಸಿಲಿಂಡರ್ಗಳ ದಾಸ್ತಾನು ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಎಲ್ಪಿಜಿ ಕೊರತೆ ಕುರಿತು ಹರಿದಾಡುತ್ತಿರುವ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಅನಾವಶ್ಯಕ ಆತಂಕ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಜನರು ಇಂತಹ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನೇ ನಂಬಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದಲ್ಲದೆ, ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಅಥವಾ ಕುಂದುಕೊರತೆಗಳಿದ್ದರೆ ಸಾರ್ವಜನಿಕರು ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 9611404384 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಪಿಜಿ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಆತಂಕಪಡಬೇಕಾದ ಯಾವುದೇ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
