ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು, ಪಕ್ಷವು ತನ್ನ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸುವ ಮೊದಲು ನಾಮಪತ್ರ ಸಲ್ಲಿಸಿದರು.
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಒಳಜಗಳ ಸ್ಫೋಟಗೊಂಡಿದ್ದು, ಲಿಂಗಾಯತ ಮತ್ತು ಅಲ್ಪಸಂಖ್ಯಾತ ನಾಯಕರ ನಡುವಿನ ಪೈಪೋಟಿ ತೆರೆದ ಮುಖಾಮುಖಿಗೆ ತಲುಪಿದೆ.
ಅಧಿಕೃತ ಅಭ್ಯರ್ಥಿ ಘೋಷಣೆಗೆ ಮುನ್ನವೇ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಪಕ್ಷದೊಳಗೆ ಭಾರಿ ಅಸಮಾಧಾನ ವ್ಯಕ್ತವಾಗಿದೆ. ಪಕ್ಷದ ಬಿ-ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಿರುವ ಕ್ರಮದ ಬಗ್ಗೆ ಹಲವು ನಾಯಕರು ಪ್ರಶ್ನೆ ಎತ್ತಿದ್ದಾರೆ.
ಪೂಜ್ಯ ಮಾವನವರಾದ ಶ್ರೀ ಶಾಮನೂರು ಶಿವಶಂಕರಪ್ಪಾಜಿಯವರ ಆಶೀರ್ವಾದ ಹಾಗೂ ಅವರ ಆಶಯದಂತೆ ಜೊತೆಗೆ ಜನರ ಅಪಾರ ಬೆಂಬಲ ಮತ್ತು ಪ್ರೇರಣೆಯಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಮ್ಮ ಪುತ್ರ ಸಮರ್ಥ್ ಶಾಮನೂರು ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
— Prabha Mallikarjun (@DrPrabhaSSM) March 20, 2026
ಈ ಮಹತ್ವದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಯುವ… pic.twitter.com/UPNNGuUx7v
ಕೆಪಿಸಿಸಿ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಅವರ ಮುಂದೆ ಅಲ್ಪಸಂಖ್ಯಾತ ಸಮುದಾಯದ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಚಿವರಾದ Zameer Ahmed Khan, Rahim Khan, Salim Ahmed ಹಾಗೂ ಶಾಸಕ Tanveer Sait ಸೇರಿದಂತೆ ಹಲವರು ಈ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯ ಇರುವುದರಿಂದ ಈ ಬಾರಿ ಟಿಕೆಟ್ ತಮ್ಮ ಸಮುದಾಯದ ಅಭ್ಯರ್ಥಿಗೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕೆಲವರು ತಮ್ಮ ಬೇಡಿಕೆ ಈಡೇರದಿದ್ದರೆ ತೀವ್ರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದಕ್ಕೆ ವಿರುದ್ಧವಾಗಿ ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕರು ಸಮರ್ಥ್ ಶಾಮನೂರು ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ಸಚಿವ Eshwar Khandre ಹಾಗೂ ಶಾಸಕ CS Nadagouda ಸೇರಿದಂತೆ ಹಲವರು ಶಾಮನೂರು ಕುಟುಂಬದ ದಾವಣಗೆರೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ನೀಡಿದ ಕೊಡುಗೆಯನ್ನು ಉಲ್ಲೇಖಿಸಿ ಟಿಕೆಟ್ ನೀಡುವುದು ಸಮಂಜಸ ಎಂದು ವಾದಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಒಂದು ಸಮುದಾಯದ ಮತಬ್ಯಾಂಕ್ ಮೇಲೆ ಅವಲಂಬಿತವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದು, ಈ ವಿಚಾರದಲ್ಲಿ ‘ಬ್ಲಾಕ್ಮೇಲ್ ರಾಜಕೀಯ’ಕ್ಕೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala ಅವರು ಕೆಪಿಸಿಸಿ ಅಧ್ಯಕ್ಷರಾದ @DKShivakumar ಹಾಗೂ ಸಿಎಂ @siddaramaiah ಅವರ ಜತೆ ಶುಕ್ರವಾರ ಚರ್ಚೆ ನಡೆಸಿದರು. ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು ಇದ್ದರು. pic.twitter.com/QbNFTQJ6T7
— Karnataka Congress (@INCKarnataka) March 20, 2026
ಈ ನಡುವೆ, ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಎರಡೂ ಸಮುದಾಯಗಳ ಒತ್ತಡದ ನಡುವೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಒಟ್ಟಿನಲ್ಲಿ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದ್ದು, ಅಂತಿಮ ನಿರ್ಧಾರ ಪಕ್ಷದ ಏಕತೆ ಹಾಗೂ ಚುನಾವಣಾ ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿದೆ.
