ಬೆಂಗಳೂರು/ನವದೆಹಲಿ: ರಾಜ್ಯದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ Xನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ತಂಬಾಕು ಬೆಳೆಯುವ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೆ ಕೇಂದ್ರ ಸಚಿವರ ಜೊತೆ ಫಲಪ್ರದ ಮಾತುಕತೆ ನಡೆಯಿತು ಎಂದು ಹೇಳಿದ್ದಾರೆ.
ಸಭೆಯಲ್ಲಿ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲಾಗಿದ್ದು, ತಂಬಾಕು ಉತ್ಪನ್ನಗಳ ತಕ್ಷಣದ ಖರೀದಿ, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಹೆಚ್ಚಿಸುವುದು ಮತ್ತು ಹೊಸ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ.

ಈ ಸಂಬಂಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಬೆಳೆಗಾರರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ಯೆ ಪರಿಹಾರಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಇದಲ್ಲದೆ, ತಂಬಾಕು ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರೊಂದಿಗೆ ಚರ್ಚೆ ನಡೆಸುವಂತೆ ಸಚಿವರು ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಭೆಯಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಮೈಸೂರು–ಕೊಡಗು ಸಂಸದ ಯದುವೀರ್ ವಾಡಿಯಾರ್, ಶಾಸಕ ಎ. ಮಂಜು, ಶಾಸಕ ಜಿ.ಡಿ. ಹರೀಶ್ ಗೌಡ, ಶಾಸಕ ಸಿ.ಎನ್. ಮಂಜೇಗೌಡ, ಕೋಲಾರ ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕ ಮಹದೇವ್, ಅಶ್ವಿನ್ ಕುಮಾರ್ ಹಾಗೂ ಜೆಡಿಎಸ್ ಹಿರಿಯ ನಾಯಕ ಕೃಷ್ಣನಾಯಕ ಸೇರಿದಂತೆ ಹಲವರು ಭಾಗವಹಿಸಿದ್ದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಗಮನಿಸಿ ತಕ್ಷಣದ ಖರೀದಿ ಮತ್ತು ರಫ್ತು ಅವಕಾಶಗಳನ್ನು ವಿಸ್ತರಿಸುವಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
