ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ರಸ್ತೆ ಅಗಲೀಕರಣ ಮಾಡಬಹುದೇ ಅಥವಾ ಬೇರೆ ಅವಕಾಶಗಳಿವೆಯೇ ಎಂದು ಆಲೋಚನೆ ಮಾಡಿದ್ದೇವೆ. ಈ ಹಿಂದೆ ಕೆ.ಜೆ ಜಾರ್ಜ್ ಅವರು ಸಚಿವರಾಗಿದ್ದಾಗ ಸ್ಟೀಲ್ ಬ್ರಿಡ್ಜ್ ಮಾಡಲು ಹೋದಾಗ ಗಲಾಟೆ ಮಾಡಿ ಅದನ್ನು ನಿಲ್ಲಿಸಿದರು. ಈಗ ಅದರ ತೊಂದರೆ ಅನುಭವಿಸುತ್ತಿದ್ದೇವೆ. ಈಗ ಈ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರು ನಗರದ ಪೂರ್ವದಿಂದ ಪಶ್ಚಿಮಕ್ಕೆ (17 ಕಿ.ಮೀ), ದಕ್ಷಿಣದಿಂದ ಉತ್ತರಕ್ಕೆ (23 ಕಿ.ಮೀ) 40 ಕಿ.ಮೀ ಉದ್ದದ ಸುರಂಗ ರಸ್ತೆ ಮಾಡಲು ಹೊರಟಿದ್ದೇವೆ. ಬೆಂಗಳೂರು ನಗರದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಇದರ ಮೊದಲ ಹಂತದ ಯೋಜನೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತಿದೆ. ಅತಿಲೋಕ್ ಇಂಜಿನಿಯರಿಂಗ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದ್ದು, ಸರ್ಕಾರ ಅದಕ್ಕೆ ಅನುಮತಿ ನೀಡಿದೆ” ಎಂದು ತಿಳಿಸಿದರು.
“1682 ಕಿ.ಮೀ ಉದ್ದದಷ್ಟು ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದ್ದು, 30 ವರ್ಷಗಳ ಕಾಲ ಬಾಳಿಕೆ ಬರುವ ನಿರ್ವಹಣೆ ಮುಕ್ತ ರಸ್ತೆಗಳನ್ನು ಮಾಡಲಾಗಿದೆ. ಈ ಯೋಜನೆಗಳಿಗೆ 9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು 850 ಕಿ.ಮೀ ಉದ್ದದ ಮಳೆನೀರುಗಾಲುವೆಗಾಗಿ ವಿಶ್ವಬ್ಯಾಂಕ್ ನಿಂದ 2 ಸಾವಿರ ಕೋಟಿ ಹಣ ಪಡೆಯಲಾಗಿದೆ. ಈ ಪೈಕಿ 480 ಕಿ.ಮೀ ಪೂರ್ಣಗೊಂಡಿದ್ದು, 175 ಕಿ.ಮೀ ಉದ್ದದ ಕಾಮಗಾರಿ ನಡೆಯುತ್ತಿದೆ. ಉಳಿದ 173 ಕಿ.ಮೀ ಉದ್ದದ ಕಾಮಗಾರಿ ಮುಂದೆ ಕೈಗೆತ್ತಿಕೊಳ್ಳುತ್ತೇವೆ. ಆ ಮೂಲಕ ಬೆಂಗಳೂರಿನಲ್ಲಿ ಪೂರ್ಣಪ್ರಮಾಣದಲ್ಲಿ ಯೋಜನೆ ಮುಕ್ತಾಯವಾಗಲಿದೆ” ಎಂದು ತಿಳಿಸಿದರು.