ಬೆಂಗಳೂರು, ಜೂ.25: ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42 ACMM ನ್ಯಾಯಾಲಯ ಆದೇಶ ನೀಡಿದೆ.
ನಗರದ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಉದಯನಿಧಿ ಸ್ಟಾಲಿನ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಉದಯನಿಧಿ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಈ ವೇಳೆ ಉದಯನಿಧಿ ಪರ ವಕೀಲರು, ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ತಮ್ಮ ಕಕ್ಷಿದಾರರು ಕ್ರೀಡಾ ಸಚಿವರಾಗಿದ್ದಾರೆ. ಹೀಗಾಗಿ ಕೋರ್ಟ್ ಗೆ ಹಾಜರಾಗಲು ವಿನಾಯಿತಿ ನೀಡುವಂತೆ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಸುಪ್ರೀಂಕೋರ್ಟ್ ನಲ್ಲಿ ಎಲ್ಲ ಕೇಸ್ ಗಳನ್ನು ಒಂದು ಕಡೆ ವಿಚಾರಣೆ ವರ್ಗಾವಣೆ ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ಆದೇಶದ ಪ್ರತಿ ಸಲ್ಲಿಸುವಂತೆ ಸೂಚಿಸಿ ಆಗಸ್ಟ್ 8ಕ್ಕೆ ವಿಚಾರಣೆ ಮುಂದೂಡಿದರು.
ಕಳೆದ ವರ್ಷ ಸೆಪ್ಟಂಬರ್ 4 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗಿ, ಮಲೇರಿಯಾ ಹಾಗೂ ಕೊರೋನ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.