Home ರಾಜಕೀಯ ಇಂದು ರಾಜ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗಮನ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ : ನಿಖಿಲ್ ಕುಮಾರಸ್ವಾಮಿ

ಇಂದು ರಾಜ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗಮನ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ : ನಿಖಿಲ್ ಕುಮಾರಸ್ವಾಮಿ

15
0

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ 11.50ಕ್ಕೆ ದಿಲ್ಲಿಯಿಂದ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು.

ಆನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನೆಗೆ ತೆರಳಿ ತಂದೆ, ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು.

ರವಿವಾರ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಅವರು ಕೆಲಸ ಆರಂಭ ಮಾಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಪಕ್ಷದ ಸಂಘಟನೆಗೆ ದುಡಿಯುತ್ತೇನೆ: ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ಗ್ಯಾರಂಟಿ ನಿಲ್ಲಿಸುತ್ತೇವೆ ಎನ್ನುವುದು ಉದ್ದಟತನ: ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ನಿಖಿಲ್ ಹೇಳಿದರು.

ಹಾಸನದಲ್ಲಿ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ. ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here