Home ಬೆಂಗಳೂರು ನಗರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ, ನ್ಯಾಯಾಲಯದ ಆದೇಶ ಪಾಲಿಸಿದ್ದೇವೆ: ರಾಜ್ಯ ಸರ್ಕಾರ ಸ್ಪಷ್ಟನೆ

ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ, ನ್ಯಾಯಾಲಯದ ಆದೇಶ ಪಾಲಿಸಿದ್ದೇವೆ: ರಾಜ್ಯ ಸರ್ಕಾರ ಸ್ಪಷ್ಟನೆ

15
0
We have not released water to Tamil Nadu with intention of alliance, we have obeyed court'S order: State govt clarifies
We have not released water to Tamil Nadu with intention of alliance, we have obeyed court'S order: State govt clarifies

ಬೆಂಗಳೂರು:

“ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜೊತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸ ಹಾಗೂ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿ ಶಿವಕುಮಾರ್ ಅವರು ಹೀಗೆ ಹೇಳಿದರು.

“ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ. ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ. ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ ಎಂದರು.

ಈ ಹಿಂದೆ ಇಂತಹ ಪರಿಸ್ಥಿತಿಯಲ್ಲಿ ಜನತಾ ದಳ ಹಾಗೂ ಬಿಜೆಪಿ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದವು ಎಂಬ ಅಂಕಿ ಅಂಶ ನೀಡಬಲ್ಲೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಕಾವೇರಿ, ಮಹಾದಾಯಿ, ಕೃಷ್ಣಾ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಆಲೋಚಿಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರದಲ್ಲಿದ್ದರೂ ಮಹಾದಾಯಿ, ಕೃಷ್ಣ ವಿಚಾರ ಇತ್ಯರ್ಥವಾಗಿಲ್ಲ. ಈ ಬಗ್ಗೆಯೂ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here