ಶಿವಮೊಗ್ಗ : ಕಾನೂನಿನ ಪ್ರಕಾರ ಏನು ಆಗಬೇಕು ಅದು ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪೆನ್‌ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ಕಾನೂನಿನ ಪ್ರಕಾರವೇ ಎಲ್ಲ ಕ್ರಮಗಳು ಜರುಗುತ್ತವೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು.