Home ರಾಜಕೀಯ Why does the Center turn a blind eye to Kannadiga’s sweat tax?:...

Why does the Center turn a blind eye to Kannadiga’s sweat tax?: Siddaramaiah| ಕನ್ನಡಿಗರ ಬೆವರಿನ ತೆರಿಗೆ ಮೇಲೆ ಯಾಕೆ ಕೇಂದ್ರಕ್ಕೆ ಕೆಂಗಣ್ಣು?: ಸಿದ್ದರಾಮಯ್ಯ

26
0
Why does the Center turn a blind eye to Kannadiga's sweat tax?: Siddaramaiah

ಬೆಂಗಳೂರು: ‘ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಾ ಅವರೇ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ, ‘ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ 15ನೆ ಹಣಕಾಸು ಆಯೋಗ ರಾಜ್ಯಕ್ಕೆ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇ.4.7ರಿಂದ ಶೇ.3.74ಕ್ಕೆ ಇಳಿಸಿದೆ’ ಎಂದು ದೂರಿದ್ದಾರೆ.

‘ಬರ ಪರಿಹಾರಕ್ಕೆ ಮನವಿ ಸಲ್ಲಿಸಿ 4 ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹ ಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿ ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ?’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಹುಬ್ಬಳ್ಳಿ-ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಾ ಅವರೇ?’ ಎಂದು ಅವರು ಕೇಳಿದ್ದಾರೆ.

‘ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಅನುದಾನ ನೀಡುವುದಾಗಿ ಕೇಂದ್ರ ಸರಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ, ಈ ವರೆಗೆ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ, ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ?: ‘ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು 1ಕಿ.ಲೋ.ಗೆ 33ರೂ.ಕೊಟ್ಟು ಖರೀದಿಸುತ್ತೇವೆಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘ಭಾರತ್ ಬ್ರಾಂಡ್’ ಎಂಬ ಹೆಸರಿನಲ್ಲಿ ಕಿಲೋಗೆ 29 ರೂ.ನಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಾ ಅವರೇ?’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here