ಬೆಂಗಳೂರು, ಜುಲೈ 4: ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತ ಯುವತಿ ಯಲಹಂಕ/ದೇವನಹಳ್ಳಿ ಭಾಗದಲ್ಲಿ ವಾಸವಾಗಿದ್ದು, ಸೋಮಶೇಖರ್ ಎಂಬಾತನೊಂದಿಗೆ ಈ ಹಿಂದೆ ಪರಿಚಯ ಹೊಂದಿದ್ದರು. ಇಬ್ಬರೂ ಹಲವು ಬಾರಿ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಭೇಟಿಯಾಗಿದ್ದುದಾಗಿ ತಿಳಿದುಬಂದಿದೆ.
ಜೂನ್ 30ರಂದು ಸೋಮಶೇಖರ್ ಯುವತಿಗೆ ಕರೆ ಮಾಡಿ, ಕಲಬುರಗಿಯಿಂದ ಸ್ನೇಹಿತರು ಬಂದಿದ್ದಾರೆ ಹಾಗೂ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ಹೇಳಿ ತಲಘಟ್ಟಪುರಕ್ಕೆ ಬರಲು ಆಹ್ವಾನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯುವತಿ ಸಂಜೆ ವೇಳೆಗೆ ರಾಪಿಡೋ ಬೈಕ್ ಟ್ಯಾಕ್ಸಿ ಮೂಲಕ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಸೋಮಶೇಖರ್ ಸೇರಿದಂತೆ ಐವರು ಯುವಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪಾರ್ಟಿ ವೇಳೆ ಅಂಬರೀಶ್ ಎಂಬಾತ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಘಟನೆಯ ಬಳಿಕ ಯುವತಿ ಆರೋಪಿಗಳಿಂದ ತಪ್ಪಿಸಿಕೊಂಡು ತಕ್ಷಣವೇ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಲಘಟ್ಟಪುರ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ಬಳಿಕ ಬಂಧಿಸಿದ್ದಾರೆ.
ಪ್ರಕರಣ ಕುರಿತು ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಯುವತಿ ಪೊಲೀಸ್ ಠಾಣೆಗೆ ಬಂದು ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆಗೆ ಸೋಮಶೇಖರ್ ಈ ಹಿಂದಿನಿಂದಲೂ ಪರಿಚಿತನಾಗಿದ್ದು, ತನ್ನ ಹುಟ್ಟುಹಬ್ಬದ ಸಂಭ್ರಮಕ್ಕೆ ಬರಲು ಆಹ್ವಾನಿಸಿದ್ದ. ಯುವತಿ ಆಹ್ವಾನದ ಮೇರೆಗೆ ತಲಘಟ್ಟಪುರಕ್ಕೆ ಬಂದಿದ್ದಾಗ ಈ ಘಟನೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಂಧಿತ ಐವರ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸಂತ್ರಸ್ತೆಯ ಹೇಳಿಕೆ, ಸಾಕ್ಷಿಗಳ ಹೇಳಿಕೆ ಹಾಗೂ ಇತರೆ ತಾಂತ್ರಿಕ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.