ಬೆಳಗಾವಿ : ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಸ್ಫೋಟದಿಂದ ಮೃತಪಟ್ಟವರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದ್ದು, ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಗೊತ್ತಾಗಿದೆ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ಕುಸಿದಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಗಾಯಾಳುಗಳನ್ನು ಅಥಣಿ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಿಯಾ ಎಕ್ಸ್‌ಪೋರ್ಟ್ ಲಕ್ಷ್ಮಣ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್ನಿಂದ ಬಾಯ್ಲರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.