ಹೆಗ್ಗಡದೇವನಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ವಸತಿ ಶಾಲೆ ಉದ್ಘಾಟನೆ ವೇಳೆ ಅಧಿಕಾರಿಗಳು ಮತ್ತು ಮುಖಂಡರು. ಚಿತ್ರ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಕಚೇರಿ
ಹೆಗ್ಗಡದೇವನಕೋಟೆ: ಹೆಗ್ಗಡದೇವನಕೋಟೆ ತಾಲ್ಲೂಕಿನ ಮಾಸ್ತಿಗುಡಿ (ಭೀಮನಹಳ್ಳಿ)ಯಲ್ಲಿ ₹6 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ವಿವಿಧೋದ್ದೇಶ ಕೇಂದ್ರದ ನೂತನ ಕಟ್ಟಡಗಳನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಶಿಕ್ಷಣವೇ ಬದುಕನ್ನು ಬದಲಿಸುವ ಶಕ್ತಿ ಎಂದು ಅವರು ಹೇಳಿದರು ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಉದ್ಘಾಟನೆಯ ಬಳಿಕ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಸಚಿವರು, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವಕಾಶಗಳನ್ನು ಬಳಸಿಕೊಳ್ಳಬೇಕು, ಚೆನ್ನಾಗಿ ಓದಿ ಉನ್ನತ ಶಿಕ್ಷಣ ಪಡೆದು ಉತ್ತಮ ಹುದ್ದೆಗಳನ್ನು ಅಲಂಕರಿಸುವ ಮೂಲಕ ಬಡತನದಿಂದ ಹೊರಬಂದು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದರು. ಪೋಷಕರು ಕೂಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾರಿದ ಶಿಕ್ಷಣದ ಮಹತ್ವದ ಆಶಯದಂತೆ, ಶಿಕ್ಷಣವೇ ಅಭಿವೃದ್ಧಿಯ ಮೊದಲ ಹೆಜ್ಜೆಯಾಗಿದ್ದು, ಸಮುದಾಯದ ಪ್ರಗತಿಗೆ ಶಿಕ್ಷಣ ಅತ್ಯಗತ್ಯ ಎಂದು ಅವರು ತಿಳಿಸಿದರು.
ಆದಿವಾಸಿ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ತಮ್ಮ ತಂದೆ ಸಿದ್ದರಾಮಯ್ಯ ಅವರು ಕೂಡ ಹಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ, ಆದಿವಾಸಿ ಸಮುದಾಯದ ಜೀವನಮಟ್ಟ ಸುಧಾರಣೆ ಹಾಗೂ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಆದಿವಾಸಿ ಸಮುದಾಯದ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಶಿಕ್ಷಣ ಮತ್ತು ಅಭಿವೃದ್ಧಿಯ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದ ಸಚಿವರು, ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ, ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿಯ ಅವಕಾಶಗಳನ್ನು ಕಲ್ಪಿಸುವ ಮೂಲಕ ಅವರ ಸರ್ವತೋಮುಖ ಪ್ರಗತಿಗೆ ಸರ್ಕಾರ ಸದಾ ಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ಭರವಸೆ ನೀಡಿದರು.
ಹಾಡಿ ಮಕ್ಕಳಿಂದ ನಡೆದ ನೃತ್ಯ ಪ್ರದರ್ಶನ ಸಚಿವರ ಮನಸೂರೆಗೊಂಡಿತು. ಮಕ್ಕಳ ಪ್ರತಿಭೆ, ಉತ್ಸಾಹವನ್ನು ಕಂಡು ಸಂತಸ ವ್ಯಕ್ತಪಡಿಸಿದ ಅವರು, ಗುಣಮಟ್ಟದ ಶಿಕ್ಷಣ ಹಾಗೂ ಸೂಕ್ತ ಅವಕಾಶಗಳು ದೊರೆತರೆ ಮಕ್ಕಳು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಯೋಜನಾ ಸಮನ್ವಯಾಧಿಕಾರಿ ಭಾರತಿ ಸಿ.ಆರ್, ಮೈಸೂರು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ಎನ್, ಬುಡಕಟ್ಟು ಜನಾಂಗದ ಮುಖಂಡ ಅಯ್ಯಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: ಹೆಗ್ಗಡದೇವನಕೋಟೆಯಲ್ಲಿ ಪ್ರಜಾಸೇವೆ ಆಂದೋಲನ: ಸಾರ್ವಜನಿಕರ ಅಹವಾಲು ಆಲಿಸಿ ಪರಿಹರಿಸುವಂತೆ ಅಧಿಕಾರಿಗಳಿಗೆ ಯತೀಂದ್ರ ಸಿದ್ದರಾಮಯ್ಯ ಸೂಚನೆ
