ಉಡುಪಿ, ಮಾ.8: ಹೆಣ್ಣು ಬದುಕು ಹಾಗೂ ಅಸ್ತಿತ್ವಕ್ಕಾಗಿ ಹೋರಾಟ ಮಾಡಿಕೊಂಡೆ ಬಂದಿದ್ದು, ಇಂದಿಗೂ ಸಮಾಜದಲ್ಲಿ ದೌರ್ಜನ್ಯ ಹಾಗೂ ಹಿಂಸೆಗೆ ಒಳಗಾಗುತಿದ್ದಾಳೆ. ಮಹಿಳೆಯರಿಗೂ ಈಗಲಾದರೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ ನೀಡುವುದರೊಂದಿಗೆ ಉತ್ತಮ ಬದುಕು ರೂಪಿಸಿ ಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಪುತ್ತಿಗೆ ಮಠಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಮಹಿಳಾ ಕೇಂದ್ರೀಕೃತ ಶಾಸನಗಳ ಕುರಿತ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಮಹಿಳೆಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತಿದ್ದಾರೆ. ಹೀಗಾಗಿ ಮಹಿಳೆಯರ ದಿನಾಚರಣೆಯ ಹೊರತಾಗಿಯೂ ಪ್ರತಿ ದಿನವೂ ಮಹಿಳೆಯರಿಗೆ ಸಮಾಜ ದಲ್ಲಿ ಗೌರವ ಸಿಗುವಂತಗಾಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ ವಿದ್ದು, ಶಾಸ್ತ್ರಗಳಲ್ಲಿ ಮಹಿಳೆಯರಿಗೆ ವಿಶೇಷ ಗೌರವವನ್ನು ನೀಡಿಲಾಗಿದೆ. ಭಾರತೀಯ ನಾರಿಯರು ತಮ್ಮ ಆದರ್ಶವನ್ನು ಜಗತ್ತಿಗೆ ಪರಿಚಿಸಿದ್ದು, ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಕುಟುಂಬದಲ್ಲಿ ಸಾಮರಸ್ಯ ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಇಂದಿಗೂ ಸ್ತ್ರೀಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು ಅವುಗಳನ್ನು ತಡೆಯುವ ಕಾರ್ಯವಾಗಬೇಕು ಎಂದ ಅವರು, ಮಹಿಳಾ ಸಮುದಾಯ ಜಾಗೃತಿಗೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಸರಕಾರ ಮಹಿಳೆಯರ ಹಿತ ರಕ್ಷಣೆಗಾಗಿ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ತಮಗೆ ತೊಂದರೆಯಾದಾಗ ಅವುಗಳ ಸದುಪಯೋಗವನ್ನು ಮಹಿಳೆ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗ ಕಾನೂನು ವಿದ್ಯಾಲಯದ ನಿರ್ದೇಶಕಿ ಡಾ.ನಿರ್ಮಲಕುಮಾ ಮಹಿಳಾ ಸಮಾನತೆ-ಮಹಿಳಾ ಕೇಂದ್ರೀಕೃತ ಶಾಸನಗಳು ಕುರಿತು ಹಾಗೂ ಡೇ ನಲ್ಮ್ ಯೋಜನಾ ಅಭಿಯಾನ ವ್ಯವಸ್ಥಾಪಕ ರಾಮಕೃಷ್ಣ ಮಹಿಳೆಯರ ಸಾಮಾಜಿಕ ಭದ್ರತಾ ಯೋಜನೆಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಕಲ್ಕೂರ, ಕಾರ್ಯದರ್ಶಿ ಪ್ರೇಮ, ಕುಂದಾಪುರ ತಾಲೂಕು ಮಹಿಳಾ ಮಂಡಲದ ಒಕ್ಕೂಟ ಅಧ್ಯಕ್ಷೆ ರಾಧಾದಾಸ್, ಕಾರ್ಕಳ ತಾಲೂಕು ಮಹಿಳಾ ಮಂಡಲದ ಒಕ್ಕೂಟ ಅಧ್ಯಕ್ಷೆ ಯಶೋಧ ಶೆಟ್ಟಿ, ತಾಲೂಕು ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಸ್ವಾಗತಿಸಿ, ಭಾಗೀರಥಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟದ ಕಾರ್ಯದರ್ಶಿ ವಸಂತಿ ಕೊರಡ್ಕಲ್ ವಂದಿಸಿದರು.
